ಮಹಿಳಾ ಪೊಲೀಸ್ ಸಬ್ ಇನ್ಸ್ಪೆಕ್ಟರ್ ತಮ್ಮ ನಿವಾಸದಲ್ಲಿ ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ಮುಂಬೈನ ಕುರ್ಲಾ ಉಪನಗರದಲ್ಲಿ ನಡೆದಿದೆ. ಮೃತರನ್ನು ಶೀತಲ್ ಯೆಡ್ಕೆ (30) ಎಂದು ಗುರುತಿಸಲಾಗಿದ್ದು ಕುರ್ಲಾ (ಪೂರ್ವ)ದ ನೆಹರು ನಗರ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.
ಕಳೆದ ಹಲವು ತಿಂಗಳಿನಿಂದ ಕೆಲಸಕ್ಕೆ ಗೈರುಹಾಜರಾಗಿದ್ದಕ್ಕಾಗಿ ಇತ್ತೀಚೆಗೆ ಶಿಸ್ತು ಕ್ರಮದ ನೋಟಿಸ್ ನೀಡಲಾಗಿತ್ತು .
ಕಳೆದೆರಡು ದಿನಗಳಿಂದ ಆಕೆಯ ಫ್ಲಾಟ್ ನಿಂದ ದುರ್ವಾಸನೆ ಬರುತ್ತಿರುವ ಬಗ್ಗೆ ನೆರೆಹೊರೆಯವರು ಪೊಲೀಸರಿಗೆ ಮಾಹಿತಿ ನೀಡಿದಾಗ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಬಂದು ಬಾಗಿಲು ಒಡೆದು ನೋಡಿದಾಗ ಯೆಡ್ಕೆ ಶವವಾಗಿ ಬಿದ್ದಿರುವುದನ್ನು ಕಂಡು ಬಂದಿದೆ ಎಂದು ಪೋಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ದೇಹವನ್ನು ಸರ್ಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಸದ್ಯ ಸಾವಿಗೆ ಕಾರಣ ಇನ್ನೂ ತಿಳಿದುಬಂದಿಲ್ಲ, ಆಕಸ್ಮಿಕ ಸಾವಿನ ಪ್ರಕರಣ ದಾಖಲಿಸಲಾಗಿದೆ ತನಿಖೆ ನಡೆಯುತ್ತಿದೆ ಎಂದು ಅವರು ಹೇಳಿದರು.
ಯೆಡ್ಕೆ ಅವರು ಫ್ಲ್ಯಾಟ್ನಲ್ಲಿ ಒಬ್ಬರೇ ವಾಸವಿದ್ದರು, ಕಳೆದ ಒಂದು ವರ್ಷಕ್ಕೂ ಹೆಚ್ಚು ಕಾಲ ಕರ್ತವ್ಯದಿಂದ ಹೊರಗಿದ್ದರು, ಈ ಕಾರಣದಿಂದಾಗಿ ಅವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗಿತ್ತು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.