ಉಡುಪಿ: ಅಕ್ಟೋಬರ್ 18ರ ಭಾನುವಾರದಂದು ಹೆಜಮಾಡಿ ಗಡಿಯಲ್ಲಿ ರಾಷ್ಟ್ರೀಯ ಬೈಕ್ ರ್ಯಾಲಿ ತಂಡವನ್ನು ಪೊಲೀಸ್ ಅಧಿಕಾರಿಗಳು ಹಾಗೂ ಸಾರ್ವಜನಿಕರು ಅದ್ಧೂರಿಯಾಗಿ ಸ್ವಾಗತಿಸಿದರು. ಬಳಿಕ ಕಾಪುವಿನಲ್ಲಿ ವಿಶೇಷ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾರ್ಕಳ ವಿಭಾಗದ ಸಹಾಯಕ ಪೊಲೀಸ್ ವರಿಷ್ಠಾಧಿಕಾರಿ ಇಶಿತಾ ಗುಪ್ತಾ ವಹಿಸಿದ್ದರು. ಕಾರ್ಯಕ್ರಮದಲ್ಲಿ ಕಾಪು ಪೊಲೀಸ್ ವೃತ್ತ ನಿರೀಕ್ಷಕ ಅಜಮತ್ ಅಲಿ, ಪೊಲೀಸ್ ನಿರೀಕ್ಷಕ ಮಹೇಶ್ ಪ್ರಸಾದ್, ಕಾಪು ಠಾಣಾಧಿಕಾರಿ ತೇಜಸ್ವಿ, ಶಿರ್ವ ಪೊಲೀಸ್ ಠಾಣಾಧಿಕಾರಿ ಮಂಜುನಾಥ ಮರಬದ ಪಡುಬಿದ್ರಿ ಠಾಣಾಧಿಕಾರಿ ಶಕ್ತಿವೇಲು ಉಪಸ್ಥಿತರಿದ್ದರು. ಶಿರ್ವ ಪೊಲೀಸ್ ಠಾಣೆಯ ಉಪ ಪೊಲೀಸ್ ನಿರೀಕ್ಷಕ ಮಂಜುನಾಥ ಮರಬದ ಕಾರ್ಯಕ್ರಮದ ಪ್ರಾಸ್ತಾವಿಕ ಮಾತನಾಡಿದರು. ರಾಷ್ಟ್ರೀಯ ಬೈಕ್ ರ್ಯಾಲಿಗೆ ಚಾಲನೆ ನೀಡಿದ ಕ್ಯಾಪ್ಟನ್ ಅಶ್ವಿನ್ ಹಾಗೂ ಐಪಿಎಸ್ ಅಧಿಕಾರಿ ಇಶಿತಾ ಗುಪ್ತಾ ಕಾರ್ಯಕ್ರಮದಲ್ಲಿ ಭಾಗವಹಿಸಿ ರ್ಯಾಲಿಯ ಉದ್ದೇಶ ಮತ್ತು ಮಹತ್ವವನ್ನು ವಿವರಿಸಿದರು. ಯುವಜನತೆಯಲ್ಲಿ ಮಾದಕ ವಸ್ತುಗಳ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸಲು ಕರ್ನಾಟಕ ರಾಜ್ಯ ಪೊಲೀಸ್ ಹಾಗೂ ಉಡುಪಿ ಜಿಲ್ಲಾ ಪೊಲೀಸ್ ವತಿಯಿಂದ “ಮಾದಕ ವಸ್ತುಗಳ ವಿರುದ್ಧ ಹೋರಾಟ” ರಾಷ್ಟ್ರೀಯ ಮೋಟಾರ್ ಸೈಕಲ್ ರ್ಯಾಲಿಯನ್ನು ಆಯೋಜಿಸಲಾಗಿತ್ತು. ಮಾದಕ ವ್ಯಸನ ಮುಕ್ತ ಸಮಾಜ ನಿರ್ಮಾಣದ ಈ ಬೃಹತ್ ಜಾಗೃತಿ ಅಭಿಯಾನದಲ್ಲಿ ಸಾರ್ವಜನಿಕರು ಹಾಗೂ ಯುವಜನತೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದಕ್ಕಾಗಿ ಅಭಿನಂದಿಸಿದರು. ಶಿರ್ವ ಪೊಲೀಸ್ ಠಾಣೆಯ ಹೆಡ್ ಕಾನ್ಸ್ಟೆಬಲ್ ಮಂಜುನಾಥ ಅಡಿಗ ಮತ್ತು ರಿಯಾ ಶೈಲಿನ್ ಕೋರ್ಡಾ ಕಾರ್ಯಕ್ರಮ ನಿರೂಪಿಸಿದರು. ರಾಷ್ಟ್ರೀಯ ಏಕತೆ, ಸಾಮಾಜಿಕ ಜಾಗೃತಿ ಮತ್ತು ಮಾದಕ ವಸ್ತುಗಳ ವಿರುದ್ಧ ಹೋರಾಟದ ಸಂದೇಶವನ್ನು ಜನಸಾಮಾನ್ಯರಿಗೆ ತಲುಪಿಸುವ ಉದ್ದೇಶದಿಂದ ಈ ರಾಷ್ಟ್ರೀಯ ಬೈಕ್ ರ್ಯಾಲಿಯನ್ನು ಆಯೋಜಿಸಲಾಗಿದೆ. ದೇಶದ ವಿವಿಧೆಡೆ ಸಂಚರಿಸಿದ ರ ್ಯಾಲಿ ರಾಷ್ಟ್ರೀಯ ಏಕತೆ, ದೇಶಪ್ರೇಮ, ಸಾಮಾಜಿಕ ಹೊಣೆಗಾರಿಕೆಯ ಮಹತ್ವ ಸಾರುವ ಮೂಲಕ ಜನಮನ ಸೆಳೆದಿದೆ. ಇಂತಹ ಜಾಗೃತಿ ಕಾರ್ಯಕ್ರಮಗಳು ಯುವಜನರಲ್ಲಿ ದೇಶಭಕ್ತಿ, ಏಕತೆಯ ಮನೋಭಾವ ಮತ್ತು ಸಮಾಜದ ಬಗ್ಗೆ ಜವಾಬ್ದಾರಿಯನ್ನು ಬೆಳೆಸಲು ಸಹಕಾರಿಯಾಗಿದೆ. ಮಾದಕವಸ್ತುಗಳ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸುವ ಮೂಲಕ, ಆರೋಗ್ಯಕರ ಮತ್ತು ಜವಾಬ್ದಾರಿಯುತ ಸಮಾಜವನ್ನು ನಿರ್ಮಿಸಲು ಇಂತಹ ಅಭಿಯಾನಗಳು ಗಣನೀಯವಾಗಿ ಕೊಡುಗೆ ನೀಡುತ್ತವೆ.

ಉಡುಪಿಯ ನಮ್ಮ ವರದಿಗಾರ,

ವಿಲ್ಸನ್ ಡಿ’ಸೋಜ







