ಶಿರ್ವ, ಆಗಸ್ಟ್ 7
ಮುದರಂಗಡಿ ಗ್ರಾಮ ಪಂಚಾಯತ್‌ನ ಮಾಜಿ ಅಧ್ಯಕ್ಷ, ಕಾಂಗ್ರೆಸ್ ಮುಖಂಡ ಹಾಗೂ ಉದ್ಯಮಿ ಡೇವಿಡ್ ಡಿಸೋಜ(55) ಅವರ ಮೇಲೆ ಗುಂಡಿನ ದಾಳಿ ನಡೆದು ಅವರು ಮೃತಪಟ್ಟ ಘಟನೆ ಗುರುವಾರ ಸಂಜೆ ಶಿರ್ವ ಸಮೀಪದ ಮುದರಂಗಡಿಯಲ್ಲಿ ನಡೆದಿದೆ.
ಪೊಲೀಸ್ ಮೂಲಗಳ ಪ್ರಕಾರ, ಸಂಜೆ ಸುಮಾರು 3:45ಕ್ಕೆ ಮುದರಂಗಡಿ ಚರ್ಚ್ ಕಾಂಪ್ಲೆಕ್ಸ್‌ನಲ್ಲಿರುವ ತಮ್ಮ ಕಚೇರಿಯಿಂದ ಹೊರಬಂದು ಪಿಲಾರು ಪ್ರಿನ್ಸ್ ಪಾಯಿಂಟ್‌ನ ನಿವಾಸಿ ಡೇವಿಡ್ ಡಿಸೋಜ ಅವರು ತಮ್ಮ ಥಾರ್ ಕಾರಿನಲ್ಲಿ ಕುಳಿತುಕೊಳ್ಳುತ್ತಿದ್ದ ವೇಳೆ ದುಷ್ಕರ್ಮಿಗಳು ಪಿಸ್ತೂಲಿನಿಂದ ದಾಳಿ ನಡೆಸಿದರು. ದಾಳಿಕೋರರು ಎದೆ ಹಾಗೂ ಹಣೆಗೆ ಮೂರು ಸುತ್ತು ಗುಂಡು ಹಾರಿಸಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಗಂಭೀರವಾಗಿ ಗಾಯಗೊಂಡಿದ್ದ ಡಿಸೋಜ ಅವರನ್ನು ಸ್ಥಳೀಯರು ಕೂಡಲೇ ಶಿರ್ವ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದರು. ಪ್ರಾಥಮಿಕ ಚಿಕಿತ್ಸೆ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಉಡುಪಿಯ ಆದರ್ಶ ಆಸ್ಪತ್ರೆಗೆ ರವಾನಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟರು. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಮಣಿಪಾಲ ಆಸ್ಪತ್ರೆಯ ಶವಗಾರಕ್ಕೆ ರವಾನಿಸಲಾಗಿದೆ.
ಸ್ಥಳದಲ್ಲಿ ತನಿಖೆ ಚುರುಕು
ಘಟನೆಯ ತಕ್ಷಣವೇ ಸ್ಥಳಕ್ಕೆ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಐಪಿಎಸ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಡಿವೈಎಸ್‌ಪಿ ಬೆಳ್ಳಿಯಪ್ಪ, ಸರ್ಕಲ್ ಇನ್ಸ್ಪೆಕ್ಟರ್ ಅಜ್ಮತ್ ಅಲಿ, ಶಿರ್ವ ಠಾಣಾಧಿಕಾರಿ ಮಂಜುನಾಥ ಮರಬದ, ಕ್ರೈಂ ಎಸ್‌ಐ ಲೋಹಿತ್ ಕುಮಾರ್, ಕಾರ್ಕಳ ಠಾಣಾಧಿಕಾರಿ ಪ್ರಸನ್ನ ಹಾಗೂ ಕಾಪು ವೃತ್ತದ ಅಧಿಕಾರಿಗಳು ಸ್ಥಳದಲ್ಲಿ ಮೊಕ್ಕಾಂ ಹೂಡಿದ್ದಾರೆ.

ಶ್ವಾನದಳ ಹಾಗೂ ವಿಧಿ ವಿಜ್ಞಾನ ತಜ್ಞರ ತಂಡವೂ ಸ್ಥಳಕ್ಕೆ ಆಗಮಿಸಿದ್ದು, ಸಾಕ್ಷ್ಯ ಸಂಗ್ರಹ ಕಾರ್ಯ ನಡೆಸಿದೆ. ಘಟನಾ ಸ್ಥಳದಿಂದ ಸ್ವಲ್ಪ ದೂರದಲ್ಲಿ ಜೀವಂತ ಗುಂಡೊಂದು ಪತ್ತೆಯಾಗಿದೆ. ದುಷ್ಕರ್ಮಿಗಳು ಬೈಕಿನಲ್ಲಿ ಪಡುಬಿದ್ರೆ ಕಡೆಗೆ ಪರಾರಿಯಾಗಿರುವ ಶಂಕೆ ಇದೆ ಎಂದು ಪೊಲೀಸರು ತಿಳಿಸಿದ್ದಾರೆ. ಚರ್ಚ್ ಆವರಣದ ಸಿಸಿಟಿವಿ ದೃಶ್ಯಗಳನ್ನು ಪೊಲೀಸರು ಪರಿಶೀಲಿಸುತ್ತಿದ್ದಾರೆ.
ಹಿನ್ನೆಲೆ
ಡೇವಿಡ್ ಡಿಸೋಜ ಅವರು ಮುದರಂಗಡಿ ಗ್ರಾಮ ಪಂಚಾಯತ್‌ನ ಮಾಜಿ ಅಧ್ಯಕ್ಷರಾಗಿದ್ದರು. ಕಾಂಗ್ರೆಸ್ ಪಕ್ಷದ ಸಕ್ರಿಯ ಮುಖಂಡರಾಗಿದ್ದ ಅವರು ಪಿಲಾರಿನಲ್ಲಿ “ಪ್ರಿನ್ಸ್ ಪಾಯಿಂಟ್” ಉದ್ಯಮವನ್ನೂ ನಡೆಸುತ್ತಿದ್ದರು. ಮೃತರು ಪತ್ನಿ ಮತ್ತು ಇಬ್ಬರು ಪುತ್ರರನ್ನು ಅಗಲಿದ್ದಾರೆ.
ಘಟನೆಯ ಹಿಂದೆ ವೈಯಕ್ತಿಕ ದ್ವೇಷವೋ ಅಥವಾ ಉದ್ಯಮದ ದ್ವೇಷವೋ ಎಂಬುದರ ಬಗ್ಗೆ ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದಾರೆ. ಈ ಸಂಬಂಧ ಶಿರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆಗೆ ಬಲೆ ಬೀಸಲಾಗಿದೆ ಎಂದು ಪೋಲಿಸ್ ಉನ್ನತ ಅಧಿಕಾರಿಗಳು ತಿಳಿಸಿದ್ದಾರೆ.

ಉಡುಪಿಯ ನಮ್ಮ ವರದಿಗಾರ,

ವಿಲ್ಸನ್ ಡಿ’ಸೋಜ







